ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ
admincoorgdaily

ಮಡಿಕೇರಿ ಅ.2 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ಅ.3 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬ್ಯಾಡಗೊಟ್ಟ ಗ್ರಾಮದ ಬೂತ್ ಸಂಖ್ಯೆ 21ರಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಸೋಮವಾರಪೇಟೆಯ ಬಿಜೆಪಿ ಕಚೇರಿಯಲ್ಲಿ ಮುದ್ರಿಸಲಾಗಿದೆ ಎನ್ನಲಾದ 63 ಮತದಾರರ ನಮೂನೆ-7ಗಳನ್ನು ಬಿಎಲ್‌ಎಗಳಾದ ರಜಿನಿ ಯು.ಎಲ್. ಹಾಗೂ ಲೋಕೇಶ್ ಅವರು ಬಿಎಲ್‌ಓಗೆ ಸಲ್ಲಿಸಿರುವ ವಿಚಾರವು ಬಹಿರಂಗಗೊAಡಿದೆ ಎಂದು ಆರೋಪಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಬಿಎಲ್‌ಎಗಳಾದ ರಜಿನಿ ಯು.ಎಲ್., ಲೋಕೇಶ್ ಹಾಗೂ ಇತರ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅಲ್ಲದೆ, ಪ್ರಕರಣದ ಸಂಪೂರ್ಣ ತನಿಖೆಯನ್ನು ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಅಮೀನ್ ಮೊಹಿಸಿನ್ ಮನವಿ ಮಾಡಿದ್ದಾರೆ.
ಈ ಹಿಂದೆ ಜ.18ರಂದು ಎಸ್‌ಐಆರ್ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೃಹತ್ ಜನಾಗ್ರಹ ಸಮಾವೇಶ ಆಯೋಜಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು ಎಂದು ಗಮನ ಸೆಳೆದಿದ್ದಾರೆ. ಫೋಟೋ