Kodagu

ವಿದ್ಯಾರ್ಥಿಗಳಲ್ಲಿ ಕನಸು ಇದ್ದು, ಉತ್ತಮ ಸಾಧನೆ ಮಾಡುವತ್ತ ಮನಸ್ಸು ಮಾಡಬೇಕು: ಡಾ.ಮಂತರ್ ಗೌಡ

admincoorgdaily

ವಿದ್ಯಾರ್ಥಿಗಳಲ್ಲಿ ಕನಸು ಇದ್ದು, ಉತ್ತಮ ಸಾಧನೆ ಮಾಡುವತ್ತ ಮನಸ್ಸು ಮಾಡಬೇಕು: ಡಾ.ಮಂತರ್ ಗೌಡ
1002811231.jpg


ಮಡಿಕೇರಿ:-ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಕನಸು ಕಟ್ಟಿಕೊಳ್ಳಬೇಕು. ಆ ದಿಸೆಯಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡುವತ್ತ ಗಮನ ಹರಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 2026ನೇ ಸಾಲಿನ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತು ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡರೂ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಹೋದರತ್ವಕ್ಕೆ ಆದ್ಯತೆ ನೀಡಬೇಕು ಎಂದರು.

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವ ಮತ್ತು ಸಂವಿಧಾನದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿದೆ. ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆ, ವಿಧಾನಸಭಾಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಸಚಿವರು ಹಾಗೂ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವ ಜೊತೆಗೆ, ಸಂಸತ್ತಿನ ಮಾದರಿಯಲ್ಲಿ ಕಲಾಪಗಳಲ್ಲಿ ಭಾಗವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜದ ಅಭಿವೃದ್ಧಿ ಕೇವಲ ಸರ್ಕಾರ ಅಥವಾ ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ.

 ಪ್ರತಿಯೊಬ್ಬರೂ ತಮ್ಮ ವೃತ್ತಿಯ ಜೊತೆಗೆ ಸಮಾಜದ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ವಹಿಸಬೇಕು. ದೊಡ್ಡ ಮಟ್ಟದ ಸೇವೆ ಮಾಡಲು ಸಾಧ್ಯವಾಗದಿದ್ದರೂ, ತಮ್ಮ ಕೈಲಾದಷ್ಟು ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಎಂಬ ಮೂರು ಪ್ರಮುಖ ಅಂಗಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಶಾಸಕಾಂಗ ಉತ್ತಮ ಕಾನೂನುಗಳನ್ನು ರೂಪಿಸಿದರೂ, ಕಾಯಾರ್ಂಗ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ನಿರೀಕ್ಷಿತ ಫಲಿತಾಂಶ ದೊರೆಯುವುದಿಲ್ಲ. ಆದ್ದರಿಂದ ಮೂರು ಅಂಗಗಳ ನಡುವೆ ಸಮನ್ವಯ ಅತ್ಯಗತ್ಯ ಎಂದರು.

ಸಮಾಜದ ಪ್ರತಿಯೊಂದು ಸಮಸ್ಯೆಯನ್ನೂ ಬೇರೆಯವರ ಜವಾಬ್ದಾರಿ ಎಂದು ಭಾವಿಸುವ ಮನೋಭಾವ ಬದಲಾಗಬೇಕು. ಎಲ್ಲರೂ ವಿದ್ಯಾವಂತರಾಗಬೇಕು. ಬುದ್ಧಿವಂತಿಕೆ ಮತ್ತು ವಿದ್ಯಾಭ್ಯಾಸ ಎರಡೂ ವಿಭಿನ್ನವಾಗಿದ್ದು, ಶಿಕ್ಷಣವು ವ್ಯಕ್ತಿಯ ಆಲೋಚನೆ ಹಾಗೂ ಸಮಾಜದ ಕುರಿತಾದ ದೃಷ್ಟಿಕೋನವನ್ನು ವಿಸ್ತರಿಸುತ್ತದೆ. ಮುಂದಿನ ದಿನಗಳಲ್ಲಿ ಉನ್ನತ ಶೈಕ್ಷಣಿಕ ಅರ್ಹತೆ ಹೊಂದಿರುವವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ ಕಾರ್ಯಕ್ರಮವನ್ನು ಆಯೋಜಿಸಿದೆ. ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಿಲನ ಭರತ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಸ್ವಾಗತಿಸಿದರು. ಪವನ್ ಕುಮಾರ್ ನಿರೂಪಿಸಿದರು.

ವಿದ್ಯಾರ್ಥಿಗಳಿಂದ ಸಂಸತ್ ಕಲಾಪ: 

ಯುವ ಸಂಸತ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣಾ ಪ್ರಕ್ರಿಯೆ, ಜನಪ್ರತಿನಿಧಿಗಳ ಆಯ್ಕೆ, ಸದನದ ಕಲಾಪಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ವಿಧಾನವನ್ನು ಅಣಕು ಸಂಸತ್ ಕಲಾಪದ ಮೂಲಕ ಪ್ರಸ್ತುತಪಡಿಸಿ ಗಮನ ಸೆಳೆದರು.
ಪ್ರೌಢಶಾಲೆ, ಪದವಿಪೂರ್ವ, ಪದವಿ, ವೈದ್ಯಕೀಯ, ತಾಂತ್ರಿಕ ಹಾಗೂ ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಹಂತಗಳ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಾಗಿ ಭಾಗವಹಿಸಿ, ಕೊಡಗು ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.

ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರು ಸಭಾಧ್ಯಕ್ಷರನ್ನು ಸಭಾಧ್ಯಕ್ಷರ ಪೀಠದವರೆಗೆ ಕರೆತಂದರು. ಬಳಿಕ ಸಭಾಧ್ಯಕ್ಷರು ತಮ್ಮ ಆಸನದಲ್ಲಿ ಕುಳಿತು ಕಲಾಪ ಆರಂಭಿಸಲು ಅನುಮತಿ ನೀಡಿದರು. ನಾಡಗೀತೆ ಹಾಗೂ ವಂದೇ ಮಾತರಂ ಗೀತೆಯೊಂದಿಗೆ ಯುವ ಸಂಸತ್ ಕಲಾಪ ಆರಂಭಗೊಂಡಿತು. 

ಸಂಸತ್ ಅಧಿವೇಶನದ ಮಾದರಿಯಲ್ಲಿ ವಿದ್ಯಾರ್ಥಿಗಳು ಸಭಾಧ್ಯಕ್ಷರು, ಪ್ರಧಾನಮಂತ್ರಿ, ವಿವಿಧ ಖಾತೆಗಳ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರ ಪಾತ್ರಗಳನ್ನು ನಿರ್ವಹಿಸಿದರು. ಕಲಾಪದ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು.
ಸಭಾಧ್ಯಕ್ಷರ ಪಾತ್ರ ನಿರ್ವಹಿಸಿದ ಮುತ್ತಪ್ಪ ಬೋರಪ್ಪ ಮೊಕಾಶಿ ಮಾತನಾಡಿ, ಪ್ರಜಾಪ್ರಭುತ್ವದ ಶಕ್ತಿ ಜನರ ಧ್ವನಿಯಲ್ಲಿದೆ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಎಲ್ಲರ ಆಶಯವಾಗಬೇಕು. ಈ ನಿಟ್ಟಿನಲ್ಲಿ ಸಮಾಜಮುಖಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಪಾತ್ರ ನಿರ್ವಹಿಸಿದ ಮನೀಶ್ ಪ್ರಭಾಕರ್ ಅವರು ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಬಳಿಕ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ವಿದ್ಯುತ್ ಸಮಸ್ಯೆ, ಬರಗಾಲ, ಕುಡಿಯುವ ನೀರಿನ ಕೊರತೆ, ಮಳೆ, ಅರಣ್ಯ ನಾಶ, ಬಾಲಕಾರ್ಮಿಕ ಪದ್ಧತಿ, ಸಾರಿಗೆ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ಶಿಕ್ಷಣದ ಗುಣಮಟ್ಟ, ಪರಿಸರ ಸಂರಕ್ಷಣೆ, ಮೂಲಸೌಕರ್ಯಗಳ ಕೊರತೆ ಹಾಗೂ ತಂತ್ರಜ್ಞಾನದ ಸದ್ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಡಳಿತ ಪಕ್ಷದ ಸಚಿವರನ್ನು ಪ್ರಶ್ನಿಸಿದರು.

ಇದಕ್ಕೆ ಆಡಳಿತ ಪಕ್ಷದ ಸಚಿವರು ಅಂಕಿ-ಅಂಶಗಳ ಸಹಿತ ಉತ್ತರ ನೀಡುವ ಮೂಲಕ ಸದನದ ಗಮನ ಸೆಳೆದರು. ಪ್ರಮುಖ ವಿಷಯಗಳ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆದ ಆರೋಗ್ಯಕರ ಚರ್ಚೆ ಹಾಗೂ ವಾಗ್ವಾದಗಳು ನೈಜ ಸಂಸತ್ ಕಲಾಪವನ್ನು ನೆನಪಿಸುವಂತಿದ್ದವು.
ಸಂಸ್ಥೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಯುವ ಸಂಸತ್ ಕಲಾಪದ ನಿರ್ವಹಣೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‍ಸಿಸಿ ಕೆಡೆಟ್‍ಗಳು ಸಹಕರಿಸಿದರು.