Kodagu

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ- ಎಸ್‌ವೈಎಸ್ ಜಿಲ್ಲಾ ಸಮಿತಿ ಖಂಡನೆ- ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

admincoorgdaily

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ- ಎಸ್‌ವೈಎಸ್ ಜಿಲ್ಲಾ ಸಮಿತಿ ಖಂಡನೆ- ತಪ್ಪಿತಸ್ಥರ ವಿರುದ್ಧ  ಕ್ರಮಕ್ಕೆ ಒತ್ತಾಯ
ನಾಪೋಕ್ಲು :ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಮುನೀರ್ ಮಲ್ಳರಿ ಹಾಗೂ ಯಾಕೂಬ್ ಮಾಸ್ಟರ್ ಕೊಳಕೇರಿ ಅವರು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ.

ಕೊಡಗಿನ ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಮತ್ತಿತರ ಕಡೆಗಳಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ. ಈ ಕುರಿತು ನ್ಯಾಯಕ್ಕಾಗಿ ಧ್ವನಿ ಎತ್ತಿ ಪ್ರಜಾಪ್ರಭುತ್ವದ ರಕ್ಷಣೆಗೆ ಚುನಾವಣಾಧಿಕಾರಿಗಳು ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಪ್ರಕರಣದ ಸತ್ಯಾಸತ್ಯತೆ ಹೊರಬರಲು ಎಸ್‌ಐಟಿ ತನಿಖೆ ನಡೆಸಬೇಕೆಂದು ಎಸ್‌ವೈಎಸ್ ಜಿಲ್ಲಾ ಸಮಿತಿ ಒತ್ತಾಯಿಸಿದೆ.