Kodagu

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

admincoorgdaily

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ
ವಿರಾಜಪೇಟೆ, ಅ. 24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀಣಾ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆನಂದ ಸುವರ್ಣ ಅವರು, ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಹೆಚ್ಚಿಸುವಲ್ಲಿ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಪ್ರಮುಖ ಪಾತ್ರ ವಹಿಸುತ್ತವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ, ಮಹಿಳೆಯರು ಸಂಘಟಿತರಾಗಿ ಅಭಿವೃದ್ಧಿಯತ್ತ ಸಾಗುವಂತೆ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಶ್ರೀಮತಿ ವಾಣಿಶ್ರೀ ಅವರು ಮಾತನಾಡಿ, ಮಹಿಳೆಯರು ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳಬೇಕು. ಮಹಿಳೆಯರ ತ್ಯಾಗಮಯ ಜೀವನದ ಮಹತ್ವವನ್ನು ಅರಿತುಕೊಳ್ಳುವುದರ ಜೊತೆಗೆ ಮಕ್ಕಳನ್ನು ತಪ್ಪು ದಾರಿಗೆ ಹೋಗದಂತೆ ಉತ್ತಮ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿಯನ್ನು ಪೋಷಕರು ನಿರ್ವಹಿಸಬೇಕು ಎಂದು ತಿಳಿಸಿದರು.

ಮಡಿಕೇರಿಯ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶ್ರೀಮತಿ ಸುಮತಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮದ ಕುರಿತು ಸಂತಸ ವ್ಯಕ್ತಪಡಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಸಿಐಪಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಡಾ. ಸುಶ್ಮಿತಾ ಪಿ.ವಿ. ಅವರು “ ಸ್ವಾವಲಂಬಿ ಬದುಕಿನ ನಿರ್ವಹಣೆಯಲ್ಲಿ ಸ್ವಉದ್ಯೋಗದ ಪಾತ್ರ ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು ಮಹಿಳೆಯರಿಗೆ ಸುಲಭದಲ್ಲಿ ಉಪಯೋಗವಾಗುವ ಸ್ವಉದ್ಯೋಗದ ಹಾಗೂ ಅದನ್ನು ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ನಿರ್ದೇಶಕರಾದ ವಿಠಲ್ ಸಾಲ್ಯಾನ್ ಅವರು ಉಪಸ್ಥಿತರಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಪಳೆಯಂಡ ಪಾರ್ಥ ಚಿನ್ನಪ್ಪ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ರಂಗೋಲಿ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜ್ಞಾನ ನಿಧಿ ಶಿಷ್ಯವೇತನ ಫಲಾನುಭವಿ ಮಕ್ಕಳಿಗೆ ಪ್ರಾದೇಶಿಕ ಸುಮತಿ ಸಹಾಯಕ ಉಪ ನಿರೀಕ್ಷಕರು ಅವರು ಮಂಜೂರಾತಿ ಪತ್ರವನ್ನು ವಿತರಿಸಿದರು. ಜ್ಞಾನವಿಕಾಸ ಕೇಂದ್ರದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ತಾಲೂಕು ಯೋಜನಾಧಿಕಾರಿ ಹರೀಶ್ ಪಿ. ಅವರು ಸ್ವಾಗತಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಉಷಾರಾಣಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಧನೇಶ್, ವಸಂತ್, ಶಿವಕುಮಾರ್, ಗೀತಾ, ಪುಷ್ಪಲತಾ, ಪ್ರತಾಪ್ ಸೇರಿದಂತೆ ಜ್ಞಾನವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.