Kodagu

ಶಿಕ್ಷಕರ ದಿನಾಚರಣೆ;ಶಿಕ್ಷಕರ ಸೇವೆ ಶ್ಲಾಘನೀಯ ಶಾಸಕ ಪೊನ್ನಣ್ಣ,

admincoorgdaily

ಶಿಕ್ಷಕರ ದಿನಾಚರಣೆ;ಶಿಕ್ಷಕರ ಸೇವೆ ಶ್ಲಾಘನೀಯ ಶಾಸಕ ಪೊನ್ನಣ್ಣ,
ವಿರಾಜಪೇಟೆ:ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವಿರಾಜಪೇಟೆ ತಾಲ್ಲೂಕು ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ-2026 ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದರು.
ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕಳೆದ ಸಾಲಿನ ಫಲಿತಾಂಶದಲ್ಲಿ ನಮ್ಮ ನಾಡಿನ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿದ್ದಾರೆ. ಇದು ಗುಣಮಟ್ಟದ ಶಿಕ್ಷಣ ನೀಡಿದ ಪ್ರತಿಫಲವಾಗಿದ್ದು, ಇದರ ಸಂಪೂರ್ಣ ಶ್ರೇಯಸ್ಸು ಶಿಕ್ಷಕರಿಗೆ ಸಲ್ಲುತ್ತದೆ. ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಮಾಜದಲ್ಲಿ ಬದುಕುವ ರೀತಿಯನ್ನೂ ಹೇಳಿಕೊಟ್ಟು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಅತ್ಯಂತ ಜವಾಬ್ದಾರಿಯುತ ಹಾಗೂ ಪೂಜ್ಯನೀಯ ಸ್ಥಾನದಲ್ಲಿರುವ ಶಿಕ್ಷಕರು ಪ್ರತಿದಿನ ತಮ್ಮ ಸಮಯವನ್ನು ಮಕ್ಕಳೊಂದಿಗೆ ಕಳೆದು ಉತ್ತಮ ದಾರಿಗೆ ಕೊಂಡೊಯ್ಯುತ್ತಿರುವುದು ಶ್ಲಾಘನೀಯ. ಸಮಾಜಕ್ಕೆ ಶಿಕ್ಷಕರ ಸೇವೆ ಹೀಗೆ ಮುಂದುವರೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕ ರೆವರೆಂಡ್ ಫಾದರ್ ಜೇಮ್ಸ್ ಡೊಮಿನಿಕ್, ಶಿಕ್ಷಕರ ಕಲ್ಯಾಣ ಸಮಿತಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಪೊನ್ನಂಪೇಟೆ ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ವಿರಾಜಪೇಟೆ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಬ್ದುಲ್ ಸಲಾಂ ಆರ್.ಕೆ., ಪೊನ್ನಂಪೇಟೆ ಮತ್ತು ವಿರಾಜಪೇಟೆ ಇಒ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಅನುದಾನರಹಿತ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ತಿಮ್ಮಯ್ಯ ಕೋಟ್ರಂಗಡ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.