ಕಳಪೆ ಕಾಮಗಾರಿಗಳ ಬಗ್ಗೆ ಶಾಸಕರ ಮೌನ ಏಕೆ ? : ತನಿಖೆ ಮತ್ತು 3 ವರ್ಷಗಳ ಕ್ರಿಯಾ ಯೋಜನೆ ಪರಿಶೀಲನೆಗೆ ರಾಕೇಶ್ ದೇವಯ್ಯ ಒತ್ತಾಯ
admincoorgdaily

ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ರಸ್ತೆ ಕಾಮಗಾರಿಗಳ ಗುಣಮಟ್ಟದ ಕುರಿತು ಸಾರ್ವಜನಿಕರು ಹಾಗೂ ವಿರೋಧ ಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರೂ, ಶಾಸಕರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಈ ವಿಚಾರದಲ್ಲಿ ಶಾಸಕರು ಮೌನ ವಹಿಸಿರುವುದೇಕೆ ಎಂಬ ಪ್ರಶ್ನೆ ಎದುರಾಗಿದೆ. ಕೆಆರ್‌ಐಡಿಎಲ್ ಇಲಾಖೆಯಲ್ಲಿ ಒಳ ಒಪ್ಪಂದದ ವಿಚಾರವಾಗಿ ಭಿನ್ನಾಭಿಪ್ರಾಯಗಳು ಮೂಡಿದ್ದು, ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳನ್ನು ಮುಚ್ಚಿಹಾಕಲಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಭ್ರಷ್ಟಾಚಾರದ ವಿರುದ್ಧ ಕಾರ್ಯನಿರ್ವಹಿಸುವುದಾಗಿ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಾಸಕರು ಭರವಸೆ ನೀಡಿದ್ದರು.
ಆದರೆ, ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಭರವಸೆಗಳ ಅನುಷ್ಠಾನದ ಬಗ್ಗೆ ಸಂಶಯ ಮೂಡುತ್ತಿದೆ ಹಾಗೂ ಶಾಸಕರು ತಾವು ಕೊಟ್ಟ ಮಾತು ಮರೆತಂತಿದೆ. ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣದ ಕೊರತೆಯಿಂದ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂಬ ಚರ್ಚೆಯ ನಡುವೆ, ನಡೆದಿರುವ ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆಯೂ ಆಕ್ಷೇಪಗಳು ವ್ಯಕ್ತವಾಗಿದೆ. ರಸ್ತೆ ನಿರ್ಮಾಣವಾದ ಎಂಟು ತಿಂಗಳೊಳಗೆ ಡಾಂಬರು ಕಿತ್ತುಬರುತ್ತಿದೆ. ಕೆಲವು ಕಡೆಗಳಲ್ಲಿ ಕಾಮಗಾರಿ ನಡೆಸದೆಯೇ ಬಿಲ್ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇನ್ನೂ ಕೆಲವು ಕಾಮಗಾರಿಗಳಲ್ಲಿ ಗುತ್ತಿಗೆದಾರರ ಹೆಸರಿನಲ್ಲಿ ಒಪ್ಪಂದ ಮಾಡಿಕೊಂಡು, ಬೇರೆಯವರು ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಳಪೆ ಕಾಮಗಾರಿಗಳ ಕುರಿತು ಬಿಜೆಪಿ ಪ್ರಶ್ನಿಸಿದಾಗ, ಅದು ರಾಜಕೀಯ ಪ್ರೇರಿತ ಟೀಕೆ ಎಂಬ ಉತ್ತರ ನೀಡಲಾಗುತ್ತಿದೆ. ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ಕಾಮಗಾರಿಗಳ ಗುಣಮಟ್ಟದ ಬಗ್ಗೆ ವಸ್ತುನಿಷ್ಠ ತನಿಖೆ ನಡೆಸಿ ಜನರಿಗೆ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.
ಕಳೆದ ಮೂರೂವರೆ ವರ್ಷಗಳಲ್ಲಿ ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಕೈಗೊಂಡಿರುವ ಕಾಮಗಾರಿಗಳ ಕ್ರಿಯಾ ಯೋಜನೆಗಳನ್ನು ಪರಿಶೀಲಿಸಬೇಕು. ಯಾವ ಪ್ರದೇಶದಲ್ಲಿ ಯಾವ ಕಾಮಗಾರಿ ನಡೆದಿದೆ, ಅದಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ, ಕಾಮಗಾರಿಯ ಗುಣಮಟ್ಟ ಹೇಗಿದೆ ಎಂಬುವುದನ್ನು ದಾಖಲೆಗಳ ಆಧಾರದಲ್ಲಿ ಪರಿಶೀಲಿಸಿದರೆ ಲೋಪದೋಷಗಳನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಕಾಮಗಾರಿಗಳ ಬಿಲ್ ಪಾವತಿಯಾಗಿಲ್ಲ ಅಥವಾ ಕಳಪೆ ಕಾಮಗಾರಿ ಕಂಡುಬoದರೆ ಬಿಲ್ ಪಾವತಿಸುವುದಿಲ್ಲ ಎಂಬ ಉತ್ತರಕ್ಕೆ ಮಾತ್ರ ಸೀಮಿತವಾಗಬಾರದು. ವಿಳಂಬಿತ ಬಿಲ್ ಪಾವತಿಯೂ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವು ರಸ್ತೆ ಕಾಮಗಾರಿಗಳಿಗೆ ಕೇವಲ ಒಂದು ಅಥವಾ ಎರಡು ವರ್ಷಗಳ ನಿರ್ವಹಣಾ ಖಾತರಿ ನೀಡಲಾಗುತ್ತಿದೆ ಎನ್ನಲಾಗಿದ್ದು, ಆ ಅವಧಿ ಮುಗಿದ ಬಳಿಕವೂ ಕಾಮಗಾರಿಯ ಗುಣಮಟ್ಟದ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ.
ಆದ್ದರಿಂದ, ಶಾಸಕರು ತಕ್ಷಣ ಮಧ್ಯಪ್ರವೇಶಿಸಿ, ಕಳಪೆ ಕಾಮಗಾರಿಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಲೋಪಗಳು ದಾಖಲೆಗಳ ಮೂಲಕ ಸಾಬೀತಾದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಕಪ್ಪುಪಟ್ಟಿಗೆ ಸೇರಿಸಬೇಕು. ವಿರಾಜಪೇಟೆ ಕ್ಷೇತ್ರದ ರಸ್ತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಕೇಳಿಬರುತ್ತಿರುವ ಆರೋಪಗಳಿಗೆ ಶಾಸಕರು ಸ್ಪಷ್ಟನೆ ನೀಡಬೇಕು. ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದಿಡುವ ಮೂಲಕ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಉಳಿಸಿಕೊಳ್ಳಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.