ನೊಖ್ಯ ಗ್ರಾಮದಲ್ಲಿ ಕಾಡಾನೆಗಳ ದಾಳಿ: ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ನಾಶ,ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ
admincoorgdaily


ಪೊನ್ನಂಪೇಟೆ, ನ 10: ತಾಲೂಕಿನ ತಿತಿಮತಿ ನೊಖ್ಯ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಮರಿಯೊಂದಿಗೆ ದಾಳಿ ನಡೆಸಿ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಘಟನೆ ನಡೆದಿದೆ.
ಗ್ರಾಮದ ಚೆಪ್ಪುಡೀರ ಕಾರ್ಯಪ್ಪ ಅವರ ಗದ್ದೆಗೆ ನಿನ್ನೆ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು ಭತ್ತದ ಬೆಳೆಯನ್ನು ತುಳಿದು ತಿಂದು ಧ್ವಂಸಗೊಳಿಸಿವೆ. ಗದ್ದೆಗೆ ಸೋಲಾರ್ ತಂತಿ ಬೇಲಿ ಅಳವಡಿಸಿದ್ದರೂ ಅದನ್ನು ಲೆಕ್ಕಿಸದೆ ಒಳನುಗ್ಗಿದ ಆನೆಗಳು ಅಪಾರ ಪ್ರಮಾಣದ ಬೆಳೆ ಹಾನಿ ಉಂಟುಮಾಡಿವೆ.
ಇನ್ನೇನು ಕೆಲವೇ ದಿನಗಳಲ್ಲಿ ಹುತ್ತರಿ ಹಬ್ಬ ಸಮೀಪಿಸುತ್ತಿದ್ದು, ಕೊಯ್ಲಿಗೆ ಸಿದ್ಧವಾಗಿದ್ದ ಫಸಲು ಕಾಡಾನೆಗಳ ದಾಳಿಗೆ ಸಂಪೂರ್ಣ ನಾಶವಾಗಿರುವುದರಿಂದ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಕುರಿತು ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಪ್ರತಿವರ್ಷವೂ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ.
ಅರಣ್ಯ ಇಲಾಖೆ ಹಾಗೂ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾಡಾನೆಗಳು ಕೃಷಿ ಭೂಮಿ ಮತ್ತು ತೋಟಗಳಿಗೆ ನುಗ್ಗದಂತೆ ಸೂಕ್ತ ವೈಜ್ಞಾನಿಕ ಹಾಗೂ ಶಾಶ್ವತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.