ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್

ಮಡಿಕೇರಿ :ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ, ಐಟಿಡಿಪಿ, ಕೌಶಲ್ಯಾಭಿವೃದ್ಧಿ ಹೀಗೆ ವಿವಿಧ ಇಲಾಖೆಗಳಿಗೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಬಗ್ಗೆ ಮಾಹಿತಿ ನೀಡಿದರು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಮಾಹಿತಿ ನೀಡಿದರು.
ಬಸವ, ಅಂಬೇಡ್ಕರ್ ಹಾಗೂ ಇಂದಿರಾ ವಸತಿ ಯೋಜನೆ ಪ್ರಗತಿ ಸಾಧಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು. ಕುಡಿಯ ಸೇರಿದಂತೆ ಲೈನ್‍ಮನೆಗಳಲ್ಲಿ ವಾಸಿಸುವ ಎಲ್ಲಾ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ಆದಿವಾಸಿ ಜನರಿಗೆ ತಲುಪುವಂತಾಗಬೇಕು ಎಂದು ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಗಿರಿಜನ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅವರ ಜೊತೆ ಚರ್ಚಿಸಿ ಆಧಾರ್ ಕಾರ್ಡ್ ಮಾಡಿಸುವ ಸಂಬಂಧ ತುರ್ತು ಕ್ರಮವಹಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಪ್ರತೀ ತಿಂಗಳು ನಡೆಸುವಂತೆ ಜಿಲ್ಲಾಧ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2, ಸಮುದಾಯ ಆರೋಗ್ಯ ಕೇಂದ್ರದಲ್ಲಿ 16, ಜನರಲ್ ವಿಭಾಗದಲ್ಲಿ 12 ವೈದ್ಯರ ಹುದ್ದೆಗಳು ಖಾಲಿ ಇದ್ದು, ಯಾರೂ ಮುಂದೆ ಬರುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು ಅವರು ಜಿಲ್ಲೆಯಲ್ಲಿ 1,16,772 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.
ಶನಿವಾರಸಂತೆ ಬಸ್ ನಿಲ್ದಾಣ ಕಾಮಗಾರಿ ಪ್ರಗತಿ ಹಾಗೂ ಕುಶಾಲನಗರದಲ್ಲಿ ಬಸ್ ಡಿಪೋ ಕಾಮಗಾರಿ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಸೆಪ್ಟೆಂಬರ್ ಅಂತ್ಯದೊಳಗೆ ಈ ಎರಡು ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ.ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಕುಮುದಾ ಶರತ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಹಲವು ಮಾಹಿತಿ ನೀಡಿದರು. ಜಿ.ಪಂ.ಉಪಕಾರ್ಯದರ್ಶಿ ಅಬ್ದುಲ್ ನಬಿ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಪಂಚಾಯತ್ ರಾಜ್ ಎಂಜಿನಿಯರ್ ಇಇ ನಾಯಕ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಚಿನ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಅನಂತ ಶಂಕರ್, ತಾ.ಪಂ.ಇಒಗಳಾದ ಪರಮೇಶ್ವರ, ಅಪ್ಪಣ್ಣ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಇತರರು ಹಲವು ಮಾಹಿತಿ ನೀಡಿದರು.