ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣ: ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಶಾಲನಗರ: ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ತಿಳಿಸಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡಗಳನ್ನು ನೆಟ್ಟನಂತರ ಮಾತನಾಡಿದ ಅವರು, ವಿಶ್ವ ಪರಿಸರ ದಿನವು ನಮ್ಮ ಪರಿಸರ ಎದುರಿಸುತ್ತಿರುವ ಸಮಸ್ಯೆಗಳಾದ ವಾಯು ಮಾಲಿನ್ಯ, ಪ್ಲಾಸ್ಟಿಕ್ ಮಾಲಿನ್ಯ, ಅಕ್ರಮ ವನ್ಯಜೀವಿ ವ್ಯಾಪಾರ, ಸುಸ್ಥಿರ ಬಳಕೆ, ಸಮುದ್ರ ಮಟ್ಟ ಹೆಚ್ಚಳ ಮತ್ತು ಆಹಾರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಅಭಿವೃದ್ಧಿಗೊಂಡಿದೆ. ನೆಲ ಮತ್ತು ಜಲ ನಮ್ಮ ರಾಷ್ಟ್ರೀಯ ಸಂಪತ್ತು, ಅವುಗಳ ಮೇಲೆ ರಾಷ್ಟ್ರದ ಎಲ್ಲಾ ಪ್ರಜೆಗಳಿಗೂ ಹಕ್ಕಿದ್ದು, ಅವುಗಳನ್ನು ಪ್ರತಿಯೊಬ್ಬರು ಕೂಡ ಸಂರಕ್ಷಣೆ ಮಾಡುವ ಹೊಣೆಗಾರಿಕೆ ಇದೆ. ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.