ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ: ಕೇಂದ್ರದಿಂದ ಸುಪ್ರೀಂಗೆ ಪತ್ರಿಕ್ರಿಯೆ ಸಲ್ಲಿಕೆ ಮೈಸೂರು-ಕೊಡಗು ಸಂಸದರ ಪ್ರಯತ್ನಕ್ಕೆ ಮತ್ತೊಂದು ಯಶಸ್ಸು

ಮೈಸೂರು:‘ನಾಡಿನ ಅತ್ಯಂತ ಪ್ರತಿಷ್ಠಿತ ಹಾಗೂ ಐತಿಹಾಸಿಕ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವುಗೊಳಿಸದಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು, ಈಗಾಗಲೇ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ನನಗೆ ಪತ್ರ ಬರೆದು ಈ ವಿಷಯದ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಸೂಕ್ತ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.
ಲೋಕಸಭೆಯಲ್ಲಿ ಪ್ರಸ್ತಾಪ:
2025ರ ಲೋಕಸಭಾ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಈ ಕುರಿತಾಗಿ ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದೆ ಎಂದು ಸಂಸದರು ವಿವರಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಕೈ ಬಿಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ. ಅರಣ್ಯˌ ಪರಿಸರ ಮತ್ತು ಹವಾಮಾನ ಇಲಾಖೆಯು ಮಧ್ಯ ಪ್ರವೇಶಿಸಿˌ ಯಾವುದೇ ಕಾರಣಕ್ಕೂ ಈ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬಾರದುˌ ಇದರಿಂದಾಗಿ ವನ್ಯ ಜೀವಿ - ಮಾನವ ಸಂಘರ್ಷಗಳು ಮತ್ತಷ್ಟು ಹೆಚ್ಚಾಗುತ್ತದೆ. ಪರಿಸರಕ್ಕೆ ತೀವ್ರ ಧಕ್ಕೆ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದ್ದೆ ಎಂದು ಮಾಹಿತಿ ನೀಡಿದ್ದಾರೆ.ಕರ್ನಾಟಕದ ಸರ್ಕಾರವು ಪರಿಸರ ಹಾಗೂ ವನ್ಯಜೀವಿಗಳಿಗೆ ತೊಂದರೆಯಾಗುವ ನಿರ್ಧಾರ ಕೈಗೊಳ್ಳದಂತೆ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು ಎಂದು ಯದುವೀರ್ ಹೇಳಿದ್ದಾರೆ.
ಕೇಂದ್ರ ಸಚಿವರಿಗೆ ಅಭಿನಂದನೆ:
ಈಗ ಈ ಮನವಿಗೆ ಸ್ಪಂದಿಸಿರುವ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಂರಕ್ಷಣೆಗೆ ಆದ್ಯತೆ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.ಬಂಡೀಪುರದ ಕುರಿತು ಸದನದಲ್ಲಿ ನಾನು ಪ್ರಸ್ತಾಪಿಸಿದ ವಿಷಯಕ್ಕೆ ಸೂಕ್ತವಾಗಿ ಸ್ಪಂದಿಸಿˌ ಅದರ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿರುವ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಯದುವೀರ್ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸದ ಯದುವೀರ್ ಒಡೆಯರ್‌ಗೆ ಕೇಂದ್ರ ಸಚಿವರು ಬರೆದಿರುವ ಪತ್ರದಲ್ಲೇನಿದೆ?:
ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಪ್ರಸ್ತಾಪಿಸಿರುವ ವಿಷಯವನ್ನು ಪರಿಸರ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸಂರಕ್ಷಣೆಗೆ ಪೂರಕವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸೂಕ್ತ ಪ್ರತಿಕ್ರಿಯೆಗಳನ್ನು ನೀಡಲಾಗುವುದು. ಹುಲಿಗಳ ದೀರ್ಘಕಾಲೀನ ಸಂರಕ್ಷಣೆ ಮತ್ತು ಅವುಗಳ ಆವಾಸಸ್ಥಾನದ ಸುರಕ್ಷತೆಯ ಉದ್ದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು.