ಯದುವೀರ್ ಪ್ರಯತ್ನದ ಫಲಶ್ರುತಿ: ಮೈಸೂರು ರನ್ ವೇ ವಿಸ್ತರಣೆ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಕ್ಕೆ ನಿರ್ಧಾರ

ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಬೇಕಾಗಿರುವ ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲು, ಕೇಂದ್ರ ಸರ್ಕಾರದಿಂದ ಆಗಬೇಕಿರುವ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಮುಂದಾಗುತ್ತೇನೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.ಚಾಮರಾಜನಗರದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ರನ್ ವೇ ವಿಸ್ತರಣೆ ಸೇರಿದಂತೆ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ಅವರು ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು, ಮೈಸೂರು ವಿಮಾನ ನಿಲ್ದಾಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲು ಅನುವಾಗುವಂತೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ತ್ವರಿತ ಗತಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಒತ್ತಡ ಹೇರಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕ್ರಿಯೆಗೆ ಮರು ಚಾಲನೆ ನೀಡಿದ ಸಂಸದರು:
ಮೈಸೂರು ವಿಮಾನ ನಿಲ್ದಾನ ರನ್ ವೇ ವಿಸ್ತರಣೆಗೆ ಭೂಮಿ ಹಸ್ತಾಂತರ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಈ ಸಂಬಂಧ ಕೇಂದ್ರ ನಾಗರಿಕ ವಿಮಾನ ಸಚಿವರನ್ನು ಭೇಟಿ ಮಾಡಿ ಈ ಸಂಬಂಧ ತಿಳಿಸಿದಾಗ, ರಾಜ್ಯ ಸರ್ಕಾರದಿಂದ ಆಗಬೇಕಾಗಿರುವ ಕ್ರಮಗಳ ಬಗ್ಗೆ ಮನವರಿಕೆ ಮಾಡಿದರು. ಕೂಡಲೇ ಕಳೆದ ಜನವರಿ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭೂ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದೆ ಎಂದು ಯದುವೀರ್ ತಿಳಿಸಿದ್ದಾರೆ.
ಕೂಡಲೇ ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿಶೇಷ ಸಭೆಯನ್ನು ಜನವರಿ ಹತ್ತರಂದು ಕರೆದು ಹಲವಾರು ವಿಷಯಗಳನ್ನು ಚರ್ಚಿಸಿದರು. ಇಲ್ಲಿ ಮತ್ತೊಮ್ಮೆ ಮೈಸೂರು ವಿಮಾನ ನಿಲ್ದಾನ ಅಭಿವೃದ್ಧಿ ಹಾಗೂ ಕ್ರಿಕೆಟ್ ಸ್ಟೇಡಿಯಂ ವಿಷಯವಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು ಎಂದು ಸಂಸದರು ವಿವರಿಸಿದ್ದಾರೆ.ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೆ. ಈ ಎಲ್ಲ ಅನುಸರಣ ಕ್ರಮಗಳು ಈಗ ಫಲಕೊಟ್ಟಿದೆ ಎಂದು ಸಂಸದರು ತಿಳಿಸಿದ್ದಾರೆ.
ಅದರಂತೆ ಚಾಮರಾಜನಗರದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜಮೀನು ಮಾಲೀಕರಿಗೆ ಅಗತ್ಯ ಪರಿಹಾರ ಒದಗಿಸಿ ಭೂಮಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸುವಂತೆ ಈಗ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಸಾಧಿಸಿ, ಕೇಂದ್ರ ಸಚಿವರನ್ನು, ಮುಖ್ಯಮಂತ್ರಿಗಳನ್ನು, ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಪರಿಣಾಮವಾಗಿ ಈಗ ಮೈಸೂರಿನಲ್ಲಿ ಎರಡು ಪ್ರಮುಖ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿದೆ. ಈ ಎರಡೂ ಯೋಜನೆಗಳು ಕೆಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿತ್ತು. ಇದಕ್ಕೆ ನಾನು ಮರು ಚಾಲನೆ ನೀಡಿದ್ದರಿಂದ ಮುಂದುವರಿಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತೇನೆ:
ಒಮ್ಮೆ ಭೂಮಿ ಹಸ್ತಾಂತರವಾದ ನಂತರ ಕೇಂದ್ರ ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಿ, ಮೈಸೂರು ವಿಮಾನ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಮುಂದಾಗುತ್ತೇನೆ. ಈಗಾಗಲೇ ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು, ರೈಲು ಹಳಿ ಹಾದು ಹೋಗಿರುವ ಸಂಬಂಧ ರೈಲ್ವೆ ಸಚಿವರನ್ನು ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಯ ಅಗತ್ಯತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಕೇಂದ್ರದ ಉಡಾನ್ ಯೋಜನೆಯಡಿ ಕ್ರಮ:
ಉಡಾನ್ ಯೋಜನೆಯಡಿ ದೇಶಾದ್ಯಂತ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ಸೇರಿಸಲು ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಈಗ ಅಗತ್ಯ ಭೂಮಿ ಹಸ್ತಾಂತರ ಪ್ರಕ್ರಿಯೆ ಚುರುಕುಗೊಂಡಿರುವ ಪರಿಣಾಮ ಮುಂದಿನ ಕೆಲಸಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಬಾಕಿ ಉಳಿದ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮನವರಿಕೆ ಮಾಡುತ್ತೇನೆ. ನಮ್ಮ ಮೈಸೂರು ವಿಮಾನ ನಿಲ್ದಾಣ ದೇಶದ ಪ್ರತಿಷ್ಠಿತ ವಿಮಾನ ನಿಲ್ದಾಣಗಳಲ್ಲಿ ಒಂದಾಗುವಂತೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇನೆ. ಅಗತ್ಯ ಬಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಅಭಿನಂದನೆ:
ಮೈಸೂರಿನಲ್ಲಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಹಾಗೂ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಜಾಗ ಗುರುತಿಸಿರುವುದಕ್ಕೆ ಮುಖ್ಯಮಂತ್ರಿಗಳಿಗೆ, ಈ ವಿಷಯದಲ್ಲಿ ನೆರವಾದ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ, ವಿಮಾನ ನಿಲ್ದಾಣ ಅಧಿಕಾರಿಗಳಿಗೆ, ಕೆಎಸ್‌ಸಿಎ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಲ್ಲರೂ ಸೇರಿ ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸೋಣ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಸಂಸದರ ನಿರಂತರ ಪ್ರಯತ್ನದ ಹಾದಿ:
ಜ.6: ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಮೈಸೂರು ವಿಮಾನ ನಿಲ್ದಾಣ ಭೂಮಿ ಹಸ್ತಾಂತರ ಪ್ರಕ್ರಿಯೆ ತ್ವರಿತಗೊಳಿಸಲು ಮನವಿ ಸಲ್ಲಿಕೆ
ಜ.9:ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿ ಭೂ ಮಂಜೂರಾತಿ, ಹಸ್ತಾಂತರ ಚುರುಕುಗೊಳಿಸಲು ಮನವಿ
ಜ.10: ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಲು ವಿಶೇಷ ಸಭೆ ಕರೆದ ಮುಖ್ಯಮಂತ್ರಿ
ಜ.16:ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜಪ್ರಾ ರಾಮ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ಮನವಿ ಸಲ್ಲಿಕೆ.
ಮಾ.7:ಭೂ ಸ್ವಾಧೀನ ಪ್ರಕ್ರಿಯೆಗೆ ಬಜೆಟ್‌ನಲ್ಲಿ 319 ಕೋಟಿ ರೂ. ಮಂಜೂರು
ಏ. 24:ಚಾಮರಾಜನಗರದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ. ರನ್ ವೇ ವಿಸ್ತರಣೆ ಸೇರಿದಂತೆ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಮೋದನೆ.
What's Your Reaction?






