ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ :ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಪ್ರಮುಖ: ವೆಂಕಟ್ ರಾಜಾ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ :ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಪ್ರಮುಖ: ವೆಂಕಟ್ ರಾಜಾ

ಮಡಿಕೇರಿ:-ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ 1098 ಗೆ ಮಾಹಿತಿ ನೀಡುವಂತಾಗಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ಗ್ರಾಮ ಹಾಗೂ ಹಾಡಿಗಳಲ್ಲಿ ಪ್ರತೀ ನಿತ್ಯ ಜಾಗೃತಿ ಕಾರ್ಯಕ್ರಮಗಳುಆಯೋಜಿಸಬೇಕು ಎಂದರು.   

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕಲಿಸುವಂತಾಗಬೇಕು. ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ನೋಡಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.       

ಮಕ್ಕಳು ಸಮಾಜದಲ್ಲಿ ಉತ್ತಮ ಹಾದಿಯಲ್ಲಿ ಸಾಗುವಂತಾಗಲು ನೈತಿಕ ಹಾಗೂ ಮೌಲ್ಯಯುತ ಶಿಕ್ಷಣ ಹಿಂದಿಗಿಂತ ಇಂದು ಹೆಚ್ಚು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪೊಷಕರು ಗಮನಹರಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದರು.  

ಇಂದಿನ ಆಧುನಿಕ ಜಗತ್ತಿನಲ್ಲಿ ಮಕ್ಕಳಿಗೆ ನೈತಿಕ ಮತ್ತು ಮೌಲ್ಯಯುತ ಶಿಕ್ಷಣದ ಜೊತೆಗೆ ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವಂತಾಗಬೇಕು. ಇದರಿಂದ ಉತ್ತಮ ಪ್ರಜೆಯಾಗಿ ಬದುಕಲು ಸಾಧ್ಯ. ಆ ನಿಟ್ಟಿನಲ್ಲಿ ಕುಟುಂಬದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು. ನೈತಿಕತೆ ಹಾಗೂ ಮೌಲ್ಯ ಕುಸಿಯದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ನಿರ್ಧಾಕ್ಷೀಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. 

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಮಕ್ಕಳ ಉತ್ತಮ ಬೆಳವಣಿಗೆಗೆ ತಂದೆ ತಾಯಂದಿರ ಶ್ರಮ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. 

‘ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತಾಗಬೇಕು. ಸೌಲಭ್ಯ ವಂಚಿತ ಮಕ್ಕಳಿಗೆ ಸವಲತ್ತುಗಳು ತಲುಪಿದಾಗ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.’ ಮಕ್ಕಳು ಕುಟುಂಬದಲ್ಲಿ ಕೆಲಸ ಮಾಡಿದರೆ ಬಾಲಕಾರ್ಮಿಕ ಪದ್ಧತಿ ಆಗುವುದಿಲ್ಲ. ಮನೆಯಲ್ಲಿ ಪೋಷಕರ ಜೊತೆ ಮನೆ ಕೆಲಸ ಮಾಡುವುದು ಅಪರಾಧವಲ್ಲ. ಆ ನಿಟ್ಟಿನಲ್ಲಿ ತಮ್ಮ ತಮ್ಮ ಮನೆಯಲ್ಲಿ ಜವಾಬ್ದಾರಿಯಿಂದ ಸಣ್ಣ ಪುಟ್ಟ ಕೆಲಸಗಳನ್ನು ಮಾಡುವುದರಿಂದ ದಿನನಿತ್ಯದ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದರು. 

ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು ಮಾತನಾಡಿ ಕೊಡಗು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯತ್ತ ದಾಪುಗಾಲು ಹಾಕುವತ್ತಾ ಮಹತ್ವಾಕಾಂಕ್ಷೆ ಹೊಂದಿದೆ ಎಂದು ತಿಳಿಸಿದರು.  2

017 ರಿಂದ ಇಲ್ಲಿಯವರೆಗೆ 2974 ಕಡೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದ್ದು, ಇದುವರೆಗೆ 22 ಬಾಲ ಕಾರ್ಮಿಕರು ಹಾಗೂ 50 ಕಿಶೋರ ಕಾರ್ಮಿಕರು ಕಂಡು ಬಂದಿದ್ದಾರೆ. ಈ ಪೈಕಿ 32 ಮಕ್ಕಳಿಗೆ ಪುನರ್ ವಸತಿ ಕಲ್ಪಿಸಲಾಗಿದ್ದು, ಉಳಿದ 40 ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.’ 

ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿ 27 ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಆಹಾರ ಸಾಮಗ್ರಿಗಳ ಕಿಟ್ ಒದಗಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‍ಫೋರ್ಸ್ ವಿಶೇಷ ತಂಡ ರಚಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು. 

ಅಂಗಡಿ, ಹೋಟೆಲ್, ಗ್ಯಾರೇಜ್, ಕಲ್ಲುಕೋರೆ, ಕೈಗಾರಿಕೆ, ತೋಟಗಳು, ಮನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಜೊತೆಗೆ ವಿಶೇಷ ಅಭಿಯಾನ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಟಿ.ಕಾವೇರಿ ಅವರು ಹೇಳಿದರು. 

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕುರಿತು ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಮಾತನಾಡಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಹದಿಹರೆಯದ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು. 

ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತಾಗಬೇಕು. ಸರ್ಕಾರವು ಸಹ ಉಚಿತ ಶಿಕ್ಷಣವನ್ನು ನೀಡುತ್ತಿದ್ದು, ಈ ಸೌಲಭ್ಯ ಪಡೆದುಕೊಳ್ಳಬೇಕು ಎಂದರು. 

ಮಕ್ಕಳ ಪ್ರತಿಭೆ ಪ್ರದರ್ಶನಕ್ಕೂ ಅವಕಾಶ ಮಾಡಬೇಕು. ಪ್ರತಿಭೆ ಪ್ರದರ್ಶನ ಹಾಗೂ ಕೌಶಲ್ಯ ಪ್ರದರ್ಶನಕ್ಕೆ ಬಾಲ ಕಾರ್ಮಿಕ ಪದ್ಧತಿ ಎಂದು ಹೇಳಲು ಬರುವುದಿಲ್ಲ ಎಂದರು.  

ಬಾಲಕಾರ್ಮಿಕ ಹಾಗೂ ಹದಿಹರೆಯದ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಮಾಹಿತಿ ಅಧ್ಯಯನ ಮಾಡುವಂತಾಗಬೇಕು ಎಂದರು.

ಮಡಿಕೇರಿ ತಾಲ್ಲೂಕು ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿರುವ ಹಿನ್ನೆಲೆ ಸನ್ಮಾನ ಸ್ವೀಕರಿಸಿ ಮಾತನಾಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಕಾರ್ಮಿಕ ಇಲಾಖೆ ಶ್ರಮಿಸುತ್ತಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ 18 ಕ್ಕೂ ಹೆಚ್ಚು ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಶಾಲೆಯಿಂದ ಹೊರಗುಳಿದ 7 ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು. 

      ಹಿಂದೆ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದು, ನಂತರ ಶಾಲೆಗೆ ಸೇರಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಶೇ.75 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜೊತೆಗೆ ರೂ.2 ಸಾವಿರ ಪ್ರೋತ್ಸಾಹಧನ ಬಹುಮಾನವನ್ನು ಆರ್‍ಟಿಜಿಎಸ್ ಮೂಲಕ ನೀಡಲಾಯಿತು.

 ಪ್ರಧಾನ‌ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ,ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ.ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್.ಶಶಿಧರ್, ನಿಖಿಲ್ ಚಂದ್ರ, ಇತರರು ಇದ್ದರು. 

      ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿದರು. ಯಶೋಧ ಪ್ರಾರ್ಥಿಸಿದರು. ಕೊಡಗು ವಿದ್ಯಾಲಯದ ವಿದ್ಯಾರ್ಥಿನೀಯರು ನಾಡಗೀತೆ ಹಾಡಿದರು. ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ನಿಖಿಲ್ ಚಂದ್ರ ಸ್ವಾಗತಿಸಿದರು. ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್ ಅವರು ವಂದಿಸಿದರು. 

      ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಯಕ್ಷಗಾನದ ಪ್ರದರ್ಶನದ ಮೂಲಕ ಅರಿವು ಮೂಡಿಸಲಾಯಿತು.